ಬೀದರ್

ಅರುಣೋದಯ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಶಿಕ್ಷಣದಿಂದ ಉನ್ನತ ಸಾಧನೆ ಸಾಧ್ಯ

ಬೀದರ್: ಶಿಕ್ಷಣದಿಂದ ಮಾತ್ರ ಜೀವನದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯವಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಪ್ರೊ. ಸಿದ್ರಾಮಪ್ಪ ಮಾಸಿಮಾಡೆ ಹೇಳಿದರು.
ನಗರದ ಋಷಿಕೇಶ ಶಿಕ್ಷಣ ಸಂಸ್ಥೆ ಸಂಚಾಲಿತ ಅರುಣೋದಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶುಕ್ರವಾರ ನಡೆದ ಪ್ರತಿಭಾ ಪುರಸ್ಕಾರ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪಾಲಕರು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು. ಮಕ್ಕಳು ಶ್ರದ್ಧೆಯಿಂದ ಜ್ಞಾನ ಸಂಪಾದಿಸಬೇಕು ಎಂದು ತಿಳಿಸಿದರು.
ಎಲ್ಲ ವೃತ್ತಿಗಳಲ್ಲೇ ಶಿಕ್ಷಕ ವೃತ್ತಿ ಶ್ರೇಷ್ಠ ಮತ್ತು ಪವಿತ್ರವಾದದ್ದು. ಕಾರಣ, ಶಿಕ್ಷಕರು ಮಕ್ಕಳ ಭವಿಷ್ಯ ಉಜ್ವಲಗೊಳಿಸಲು ಪ್ರಯತ್ನಿಸಬೇಕು ಎಂದು ಹೇಳಿದರು.
ಮಾತೆ ಮಾಣಿಕೇಶ್ವರಿ ಪದವಿಪೂರ್ವ ವಿಜ್ಞಾನ ಕಾಲೇಜು ಅಧ್ಯಕ್ಷ ರಮೇಶ ಕುಲಕರ್ಣಿ ಮಾತನಾಡಿ, ಪುರಸ್ಕಾರ, ಸನ್ಮಾನಗಳು ಮಕ್ಕಳನ್ನು ಸಾಧನೆಗೆ ಪ್ರೇರೇಪಿಸುತ್ತವೆ ಎಂದು ತಿಳಿಸಿದರು.
ಪ್ರಸ್ತುತ ಮಕ್ಕಳಿಗೆ ಭಾರತೀಯ ಸಂಸ್ಕøತಿ ಆಧಾರಿತ ಶಿಕ್ಷಣ ಅಗತ್ಯವಾಗಿದೆ. ಶಿಕ್ಷಣವೆಂದರೆ, ಕೇವಲ ಓದುವುದು, ಬರೆಯುವುದಷ್ಟೇ ಅಲ್ಲ. ಉತ್ತಮ ಸಂಸ್ಕøತಿ ಹಾಗೂ ನೈತಿಕ ಮೌಲ್ಯಗಳನ್ನು ಕಲಿಸುವುದಾಗಿದೆ ಎಂದು ಹೇಳಿದರು.
ಶಿಕ್ಷಕರು ಶಾಲೆಯ ಮಕ್ಕಳನ್ನು ತಮ್ಮ ಸ್ವತಃ ಮಕ್ಕಳೆಂದು ಭಾವಿಸಿ, ಶಿಕ್ಷಣ ನೀಡಬೇಕು ಎಂದು ಸಲಹೆ ಮಾಡಿದರು.
ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದೇವೇಂದ್ರ ಕರಂಜೆ ಮಾತನಾಡಿ, ಮಕ್ಕಳು ಒಳ್ಳೆಯ ಸಂಸ್ಕಾರ ಬೆಳೆಸಿಕೊಳ್ಳಬೇಕು. ತಂದೆ, ತಾಯಿ, ಗುರು ಹಾಗೂ ಹಿರಿಯರನ್ನು ಗೌರವಿಸಬೇಕು ಎಂದು ತಿಳಿಸಿದರು.
ಆಧುನಿಕ ತಂತ್ರಜ್ಞಾನವನ್ನು ಮಕ್ಕಳು ತಮ್ಮ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಋಷಿಕೇಶ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ರಾಜೇಂದ್ರ ಮಣಗಿರೆ ಮಾತನಾಡಿ, ಮಕ್ಕಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಪಾಲಕರು ಹಾಗೂ ಶಿಕ್ಷಕರ ಸಮಾನ ಪಾತ್ರ ಇದೆ ಎಂದು ತಿಳಿಸಿದರು.
2024ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಗಳಿಸಿದ ಚಂದ್ರಶೇಖರ ಮಹೇಶ, ರಾಧಿಕಾ ಮೊಗಲಪ್ಪ, ಲಿಂಗರಾಜ ಶಿವಕುಮಾರ, ಮೇಘಾ ಸುಧಾಕರ, ದೀಪಾಲಿ ಸಂತೋಷಕುಮಾರ ಸೇರಿದಂತೆ 16 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು.
ಸಂತೋಷ ಉದಗಿರೆ ಉಪಸ್ಥಿತರಿದ್ದರು. ಸಂಸ್ಥೆಯ ಆಡಳಿತಾಧಿಕಾರಿ ಸಂತೋಷಕುಮಾರ ಮಂಗಳೂರೆ ಸ್ವಾಗತಿಸಿದರು. ಅಲ್ಕಾವತಿ ಹೊಸದೊಡ್ಡೆ ನಿರೂಪಿಸಿದರು. ಜ್ಯೋತಿ ಸಂಗೋಳಗಿ ವಂದಿಸಿದರು.

Ghantepatrike kannada daily news Paper

Leave a Reply

error: Content is protected !!