ಕನ್ನಡ ಶಾಲೆಗಳ ಉಳಿವಿಗಾಗಿ ಹೋರಾಟ : ಕಸಾಪ ಬೆಂಬಲ
ಬೀದರ, ಜು.೨೨ : ಕರ್ನಾಟಕ ಕರ್ನಾಟಕ ಭಾಗದ ಎಲ್ಲ ಜಿಲ್ಲೆಗಳಲ್ಲಿ ಕನ್ನಡ ಶಾಲೆಗಳ ಉಳಿವಿಗಾಗಿ ಅನುದಾನ ರಹಿತ ಖಾಸಗಿ ಶಾಲೆಗಳು ಇದೇ ಜುಲೈ ೨೫ರಿಂದ ಹಮ್ಮಿಕೊಂಡಿರುವ ಹೋರಾಟಕ್ಕೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಂಪೂರ್ಣ ಬೆಂಬಲ ನೀಡಲಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷರಾದ ಸುರೇಶ ಚನ್ನಶೆಟ್ಟಿ ತಿಳಿಸಿದ್ದಾರೆ.
ಈ ಕುರಿತಂತೆ ಪ್ರಕಟಣೆ ಹೊರಡಿಸಿರುವ ಅವರು ಕರ್ನಾಟಕ ೫೦ರ ಸಂಭ್ರಮಾಚರಣೆಯ ಹೊತ್ತಿನಲ್ಲಿ ಕನ್ನಡ ನಾಡಿನಲ್ಲಿ ಕನ್ನಡ ಶಾಲೆಗಳ ಉಳಿವಿಗಾಗಿ ಹೋರಾಟ ಮಾಡುವ ಅನಿವಾರ್ಯ ನಿರ್ಮಾಣವಾಗಿರುವುದು ಶೋಚನೀಯ. ಕರ್ನಾಟಕದ ಏಕೀಕರಣಗೊಂಡಾಗಿನಿAದಲೂ ಕನ್ನಡ ನಾಡು, ನುಡಿಗಾಗಿ ಅನೇಕ ಮಹನೀಯರು ಹೋರಾಟ ಮಾಡುತ್ತಲೇ ಬಂದಿದ್ದಾರೆ. ಸರ್ಕಾರಗಳು ಆಂಗ್ಲ ಮಾಧ್ಯಮ ಶಾಲೆಗಳಿಗೆ ಮಣೆ ಹಾಕುತ್ತಿರುವುದು ಸರಿಯಲ್ಲ. ಕನ್ನಡ ಶಾಲೆಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು, ಕನ್ನಡ ಶಾಲೆಗಳಿಗೆ ನೀಡುವ ಅನುಮತಿಯನ್ನು ಸರಳೀಕರಣಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.