ಗೃಹಜ್ಯೋತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಚಾಲನೆ
ಕಲಬುರಗಿ,ಆ.೫:ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ೫ ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಇಂದು ಚಾಲನೆ ನೀಡಿದರು.
ಕಲಬುರಗಿಯ ಎನ್ವಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೃಹತ್ ಜನಸಾಗರದ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ೧೦ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಶೂನ್ಯ ಬಿಲ್ ನೀಡುವ ಮೂಲಕ ಯೋಜನೆಗೆ ಚಾಲನೆ ನೀಡಿದರು.
ನಾವು ನುಡಿದಂತೆ ನಡೆದಿದ್ದೇವೆ, ೫ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಜನರಿಗೆ ಕೊಟ್ಟ ಗ್ಯಾರಂಟಿಯನ್ನುಈಡೇರಿಸಿದ್ದೇವೆ ಎಂದರು.
ಗೃಹಜ್ಯೋತಿ ಯೋಜನೆಯಡಿ ನೋಂದಾಯಿತ ೧.೪೧ ಕೋಟಿ ಮನೆಗಳಿಗೆ ಜುಲೈ ತಿಂಗಳ ಬಳಕೆಯ ಶೂನ್ಯ ವಿದ್ಯುತ್ ಬಿಲ್ ನೀಡಲಾಗಿದೆ. ಗೃಹಜ್ಯೋತಿ ಯಫಜನೆ ಜುಲೈನಿಂದಲೇ ಝಾರಿಗೆ ಬಂದಿದ್ದು,ಜುಲೈ ತಿಂಗಳ ಬಿಲ್ನ್ನು ಆಗಸ್ಟ್ನಲ್ಲಿ ನೀಡಲಾಗುತ್ತಿದ್ದು, ೨೦೦ ಯೂನಿಟ್ ವಿದ್ಯುತ್ ಬಳಕೆಮಾಡಿದ ಎಲ್ಲರಿಗೂ ಶೂನ್ಯ ಬಿಲ್ನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ಸಂದರ್ಭದಲ್ಲಿ ಹೇಳಿದರು.
ಆಗಸ್ಟ್ ತಿಂಗಳಲ್ಲಿ ನೋಂದಾಯಿಸಿದವರಿಗೆ ಸೆಪ್ಟೆಂಬರ್ನಲ್ಲಿ ಶೂನ್ಯ ಬಿಲ್ ಬರಲಿದೆ.ನೋಂದಣಿಗೆ ಯಾವುದೇ ಗಡುವು ಇಲ್ಲ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಈಗಾಗಲೇ ಅನ್ನಭಾಗ್ಯ, ಗೃಹಜ್ಯಫತಿ, ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಯುವನಿಧಿ ಯೋಜನೆಯೂ ಜಾರಿಯಾಗುತ್ತಿದೆ.ಈ ಮೂಲಕ ಕಾಂಗ್ರೆಸ್ ಸರ್ಕಾರ ಚುನಾವಣಾ ಸಂದರ್ಭದಲ್ಲಿ ಜನತೆಗೆ ಕೊಟ್ಟಮಾತನ್ನು ಉಳಿಸಿಕೊಂಡಿದೆ.ನುಡಿದಂತೆ ನಡೆದಿದೆ ಎಂದು ಪುನರ್ ಉಚ್ಛರಿಸಿದರು.
ಇದೇ ವೇಳೆ ಬಿಜೆಪಿ ವಿರುದ್ಧ ಕಿಡಿಕಾರಿದ ಸಿಎಂ, ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುತ್ತೇವೋ ಇಲ್ಲವೋ ಎಂಬ ಚಿಂತೆ ಬಿಜೆಪಿ ನಾಯಕರಿಗೆ ಕಾಡುತ್ತಿತ್ತು. ಆದರೆ, ನಾವು ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಈಗಾಗಲೇ ಶಕ್ತಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತಂದಿದ್ದೇವೆ. ಇದೇ ಆಗಸ್ಟ್ ೧೮ ರಂದು ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆ ಎಂದೇ ಬಿಂಬಿಸಲಾಗುತ್ತಿರುವ ಗೃಹಲಕ್ಷ್ಮಿ ಯೋಜನೆ ಸಹ ಅನುಷ್ಠಾನಕ್ಕೆ ಬರಲಿದೆ. ಇದೇ ರೀತಿಯಲ್ಲಿ ಅನ್ನಭಾಗ್ಯ ಯೊಜನೆಯಡಿ ಬಡ ಕುಟುಂಬದ ಪ್ರತಿ ವ್ಯಕ್ತಿಗೆ ಐದು ಕೆಜಿ ಅಕ್ಕಿ ಹಾಗೂ ಉಳಿದ ಐದು ಕೆಜಿ ಅಕ್ಕಿಯ ಮೌಲ್ಯಕ್ಕೆ ತಕ್ಕಂತೆ ಫಲಾನುಭವಿಗಳ ಖಾತೆಗೆ ಹಣ ಸಂದಾಯ ಮಾಡಲಾಗುತ್ತಿದೆ. ಯುವ ನಿಧಿ ಯೋಜನೆ ಕೂಡ ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವುದರಲ್ಲಿ ಯಾವುದೇ ಅನುಮಾನ ಬೇಡ ಎಂದರು. ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಇಂಧನ ಸಚಿವ ಕೆ.ಜೆ.ಜಾರ್ಜ್, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್, ಐಟಿ-ಬಿಟಿ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಅರಣ್ಯ ಖಾತೆ ಸಚಿವ ಈಶ್ವರ ಖಂಡ್ರೆ, ಸಚಿವರಾದ ರಹೀಂಖಾನ್, ಶರಣಬಸಪ್ಪ ದರ್ಶನಾಪುರ, ಶಾಸಕರಾದ ಅಲ್ಲಮಪ್ರಭು ಪಾಟೀಲ್, ಎಂ.ವೈ.ಪಾಟೀಲ್, ಬಿ.ಆರ್.ಪಾಟೀಲ್, ಡಾ. ಅಜಯ್ ಸಿಂಗ್, ಕನೀಜ್ ಫಾತಿಮಾ, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶರಣಕುಮಾರ್ ಮೋದಿ, ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಜಿಪಂ. ಸಿಇಒ ಭವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಪಾಟೀಲ್ ಭುವನೇಶ್, ದೇವಿದಾಸ್, ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಪಾಂಡ್ವೆ, ಕೆ.ಕೆ.ಆರ್.ಡಿ.ಬಿ ಕಾರ್ಯದರ್ಶಿ ಅನಿರುದ್ಧ ಶ್ರವಣ್, ಪೊಲೀಸ್ ಕಮಿಷನರ್ ಆರ್.ಚೇತನ್, ಎಸ್ಪಿ ಇಶಾಪಂತ್ ಹಾಗೂ ಇತರರು ಉಪಸ್ಥಿತರಿದ್ದರು.
ಜನಸಾಗರಕ್ಕೆ ಊಟದ ವ್ಯವಸ್ಥೆ
ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಯೋಜನೆಯ ಚಾಲನಾ ಸಮಾವೇಶದಲ್ಲಿ ಸುಮಾರು ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು. ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಜನರನ್ನು ಕರೆ ತರಲು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದ ಬಸ್ ವ್ಯವಸ್ಥೆ ಮಾಡಲಾಗಿತ್ತು. ಸಮಾವೇಶದಲ್ಲಿ ಪಾಲ್ಗೊಂಡಿದ್ದ ಬೃಹತ್ ಜನಸಾಗರಕ್ಕೆ ಭರ್ಜರಿ ಊಟದ ವ್ಯವಸ್ಥೆ ಸಹ ಮಾಡಲಾಗಿತ್ತು.