ಬೀದರ್

ಮಳೆಹಾನಿ: ಸಮಸ್ಯೆಗೆ ಸ್ಪಂದಿಸಲು ಶಾಸಕ ಪ್ರಭು ಚವ್ಹಾಣ ಸೂಚನೆ

ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಎಡೆಬಿಡದೆ ನಿರಂತರ ಮಳೆಯಾಗುತ್ತಿದ್ದು, ಹಾನಿ ತಪ್ಪಿಸಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಮಾಜಿ‌‌‌ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು‌‌‌‌‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ದೂರವಾಣಿ ಮುಖಾಂತರ ಅಧಿಕಾರಿಗಳನ್ನು ಸಂಪರ್ಕಿಸಿ, ಔರಾದ ಹಾಗೂ ಕಮಲನಗರ‌ ತಾಲ್ಲೂಕುಗಳಲ್ಲಿ ಮಳೆ‌ ಪ್ರಮಾಣ ಮತ್ತು ಹಾನಿಯ ಬಗ್ಗೆ ಚರ್ಚಿಸಿದ್ದು, ತಹಸೀಲ್ದಾರರು ಮತ್ತು ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು.‌ ಗ್ರಾಮ ಮಟ್ಟದಲ್ಲಿ ಕೆಲಸ ಮಾಡುವ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಲೆಕ್ಕಾಧಿಕಾರಿಗಳ ಸಭೆ‌ ನಡೆಸಿ ಅಗತ್ಯ ನಿರ್ದೇಶನಗಳನ್ನು ನೀಡಬೇಕೆಂದು ಹೇಳಿದ್ದಾರೆ.
ಕ್ಷೇತ್ರದಲ್ಲಿ ಮನೆಗಳು ಮತ್ತು ಬೆಳೆ ಹಾನಿಯಾಗಿರುವ ಬಗ್ಗೆ ವರದಿಯಾಗಿದ್ದು, ಕೃಷಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಹಾನಿಯಾದ ಸ್ಥಳಕ್ಕೆ ತೆರಳಿ ಸರ್ಕಾರಕ್ಕೆ ನಿಖರವಾದ ವರದಿ‌ ಸಲ್ಲಿಸಬೇಕು. ಸಕಾಲಕ್ಕೆ ಪರಿಹಾರ ಕಲ್ಪಿಸಲು ಪ್ರಮಾಣಿಕವಾಗಿ ಪ್ರಯತ್ನಿಸಬೇಕು ಎಂದು ಸೂಚಿಸಿದ್ದಾರೆ.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಸೇರಿದಂತೆ ಗ್ರಾಮ ಮಟ್ಟದಲ್ಲಿ ಕೆಲಸ ಮಾಡುವ ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು‌‌ ಕೆಲಸ‌ ಮಾಡಬೇಕು.‌ ಮೊಬೈಲ್ ಫೋನ್‌ಗಳನ್ನು ಚಾಲ್ತಿಯಲ್ಲಿ ಇಟ್ಟುಕೊಂಡಿರಬೇಕು. ಸಾರ್ವಜನಿಕರಿಂದ‌ ಬರುವ ಎಲ್ಲ ಕರೆಗಳಿಗೆ ಸ್ಪಂದಿಸಬೇಕೆಂದು ಕಟ್ಟುನಿಟ್ಟಾಗಿ ತಿಳಿಸಿದ್ದಾರೆ.
ನಿರಂತರ ಸುರಿದ ಮಳೆಗೆ ಎಲ್ಲಂದರಲ್ಲಿ ನೀರು ನಿಂತಿರುತ್ತದೆ. ಇದರಿಂದ ಸೊಳ್ಳೆಗಳ‌ ಹಾವಳಿ ಹೆಚ್ಚಾಗಿ ಡೆಂಗ್ಯೂ, ಮಲೇರಿಯಾ,‌ ಚಿಕುನ್ ಗುನ್ಯಾದಂತಹ ಸಾಂಕ್ರಾಮಿಕ‌ ಕಾಯಿಲೆಗಳು ಹರಡುವ ಭೀತಿಯಿರುತ್ತದೆ. ಹಾಗಾಗಿ ಎಲ್ಲ ಗ್ರಾಮಗಳಲ್ಲಿ‌‌ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು. ಬ್ಲೀಚಿಂಗ್ ಪೌಡರ್ ಸಿಂಪಡಣೆ ಮತ್ತು ಫಾಗಿಂಗ್ ಮಾಡಿಸಬೇಕು ಮತ್ತು ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಬೇಕೆಂದು ಹೇಳಿದ್ದಾರೆ.
ಮಳೆಗೆ‌ ರಸ್ತೆಗಳು ಹಾಳಾಗುತ್ತವೆ. ಅಂತಹ ರಸ್ತೆಗಳನ್ನು ಗುರುತಿಸಿ ಸರಿಪಡಿಸುವ ಕೆಲಸವಾಗಬೇಕು. ದುರ್ಬಲವಾಗಿರುವ ಕೆರೆ-ಕಟ್ಟೆಗಳನ್ನು ಗುರುತಿಸಿ ಮುಂದಿನ ದಿನಗಳಲ್ಲಿ ಹಾನಿ ಸಂಭವಿಸದಂತೆ ಎಚ್ಚರಿಕೆ‌ ವಹಿಸಬೇಕು. ತಂತಿ ಕಡಿತದಂತಹ ಸಮಸ್ಯೆಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿ ವಿದ್ಯುತ್ ಪೂರೈಕೆಗೆ ಅಡಚಣೆಯಾಗದಂತೆ ನೋಡಿಕೊಳ್ಳಬೇಕೆಂದು ಶಾಸಕ ಪ್ರಭು ಚವ್ಹಾಣ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
Ghantepatrike kannada daily news Paper

Leave a Reply

error: Content is protected !!