ಕಾಂಗ್ರೆಸ್ ಗೆಲುವು: ವಿಜಯಸಿಂಗ್ ಸಂತಸ
ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಈಶ್ವರ ಖಂಡ್ರೆ ಭಾರಿ ಗೆಲುವು ಸಾಧಿಸಿದ್ದಕ್ಕೆ ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಸಂತಸ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ಜಾರಿಗೆ ತಂದ ಗ್ಯಾರಂಟಿಗಳು, ಸಂವಿಧಾನದ 371(ಜೆ) ಕಲಂ ತಿದ್ದುಪಡಿ ಸೇರಿದಂತೆ ಕಾಂಗ್ರೆಸ್ನ ಜನಪರ ಕಾರ್ಯಗಳು ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿವೆ ಎಂದು ಹೇಳಿದ್ದಾರೆ.
ಜಿಲ್ಲೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸ್ವತಃ ತಾವೇ ಅಭ್ಯರ್ಥಿ ಎನ್ನುವಂತೆ ಕೆಲಸ ಮಾಡಿದ್ದರು. ಅದರ ಫಲವಾಗಿ ಕಾಂಗ್ರೆಸ್ ಭಾರಿ ಬಹುಮತದಿಂದ ಗೆಲುವು ಸಾಧಿಸಲು ಸಾಧ್ಯವಾಯಿತು ಎಂದು ತಿಳಿಸಿದ್ದಾರೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಮುನ್ನಡೆ ದೊರಕಿತ್ತು. ಆದರೆ, ಈ ಬಾರಿ ಕಾಂಗ್ರೆಸ್ಗೆ ಮುನ್ನಡೆ ಲಭಿಸಿತು. ಪಕ್ಷಕ್ಕೆ ದೊಡ್ಡ ಮಟ್ಟದಲ್ಲಿ ಮತಗಳು ಹರಿದು ಬಂದವು. ಕ್ಷೇತ್ರದಲ್ಲಿ ಸಾಗರ್ ಖಂಡ್ರೆ ಅವರಿಗೆ 82,618 ಮತಗಳು ಬಿದ್ದಿವೆ ಎಂದು ತಿಳಿಸಿದ್ದಾರೆ.
ದೇಶದಲ್ಲಿ ಮೋದಿ ಅಲೆ ಇರಲಿಲ್ಲ. ಆದರೂ, ಅನೇಕರು ಇದೆ ಎನ್ನುತ್ತಿದ್ದರು. ಅಂಥವರಿಗೆ ಚುನಾವಣೆ ಫಲಿತಾಂಶ ಉತ್ತರ ನೀಡಿದೆ ಎಂದು ಹೇಳಿದ್ದಾರೆ.
ಸಾಗರ್ ಖಂಡ್ರೆ ಅವರು ತಮ್ಮ ತಂದೆಯವರಾದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಮಾರ್ಗದರ್ಶನದಲ್ಲಿ ಕ್ಷೇತ್ರವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.