ಪಾಟೀಲ್ ಗೆಲುವು ವಿಜಯಸಿಂಗ್ ಹರ್ಷ
ಬೀದರ್ : ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳನ್ನು ಒಳಗೊಂಡ ಈಶಾನ್ಯ ಕರ್ನಾಟಕ ಪದವೀಧರ ಮತಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ್ ಗೆಲುವು ಸಾಧಿಸಿದ್ದು, ಮಾಜಿ ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಶುಕ್ರವಾರ ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು, ಲೋಕಸಭೆ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಭರ್ಜರಿ ಸಾಧನೆ ಮಾಡಿರುವ ಕಾಂಗ್ರೆಸ್ ಈಗ ಈಶಾನ್ಯ ಪದವೀಧರ ಕ್ಷೇತ್ರದಲ್ಲೂ ಗೆಲುವು ಸಾಧಿಸಿದೆ ಎಂದರು. ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ್ ಅವರು ಪದವೀಧರ ಮತದಾರರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಆದ್ದರಿಂದ ಸತತ ಎರಡನೇ ಬಾರಿ ಪದವೀಧರ ಮತದಾರರು ಆಶೀರ್ವಾದ ಮಾಡಿದ್ದಾರೆ. ಈ ಮೂಲಕ ಮತ್ತೊಮ್ಮೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ಮತದಾರರು ತಕ್ಕಪಾಠ ಕಲಿಸಿದ್ದಾರೆ ಎಂದರು.
ಪ್ರಥಮ ಪ್ರಾಶಸ್ತ್ಯದ ಮತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ್ ಪಾಟೀಲ್ ಹುಮನಾಬಾದ ಅವರಿಗೆ ಲೀಡ್ ದೊರೆತ್ತಿರುವದು ಸಂಸತದ ವಿಷಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಪಾಟೀಲ್ ಅವರು ಕ್ಷೇತ್ರದಲ್ಲಿ ಸುತ್ತಾಡಿದ್ದಾರೆ. ಈ ಭಾಗದಲ್ಲಿ ಕಾಂಗ್ರೆಸ್ ಮತ್ತೆ ಭದ್ರವಾಗಿದೆ. ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಶ್ರಮಿಸಿದ್ದಾರೆ. ಆದ್ದರಿಂದ ದೊಡ್ಡ ಮಟ್ಟದ ಮತಗಳ ಅಂತರದಲ್ಲಿ ಗೆಲುವು ಸಾಧ್ಯವಾಗಿದೆ ಎಂದರು.
ಕ್ಷೇತ್ರದ ಜನರು ನೀಡಿರುವ ಬೆಂಬಲ ಸಂತಸ ತಂದಿದೆ. ಇದರಿಂದ ಭವ್ಯ ಭಾರತದ ಕನಸು ನನಸಾಗುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವಿದ್ದು, ಎಂಎಲ್ಸಿ ಕೆಲಸ ಮಾಡಲು ಪಾಟೀಲ್ ಅವರಿಗೆ ಮತ್ತೊಮ್ಮೆ ಅವಕಾಶ ಸಿಕ್ಕಿದೆ ಎಂದರು. ಕಾಂಗ್ರೆಸ್ ಅಲೆ ಇಲ್ಲ ಎನ್ನುತ್ತಿದ್ದವರಿಗೆ ಲೋಕಸಭೆ, ವಿಧಾನ ಪರಿಷತ್ ಫಲಿತಾಂಶ ಸೂಕ್ತ ಉತ್ತರ ನೀಡಿದೆ ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳು ಬಡವರಿಗೆ ಆಸರೆಯಾಗಿವೆ. ಅಲ್ಲದೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ ನಾಯಕತ್ವದಲ್ಲಿ ಪಕ್ಷ ಬಲಿಷ್ಠವಾಗಿದೆ ಎಂದು ಪ್ರಕಟಣೆಯಲ್ಲಿ ವಿಜಯಸಿಂಗ್ ತಿಳಿಸಿದ್ದಾರೆ.