ಬೀದರ್

ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ರಾಜ್ಯ ಅಧ್ಯಕ್ಷ ಸಿದ್ದಬಸಪ್ಪ ಹೇಳಿಕೆ ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಸಂಘ ಸಿದ್ಧ

ಬೀದರ್: ಶಿಕ್ಷಕರ ಏನೇ ಸಮಸ್ಯೆಗಳಿದ್ದರೂ ಪರಿಹರಿಸಲು ಸಂಘ ಸಿದ್ಧವಿದೆ ಎಂದು ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯ ಅಧ್ಯಕ್ಷ ಸಿದ್ದಬಸಪ್ಪ ಬಿ. ಹೇಳಿದರು.
ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಘಟಕದ ವತಿಯಿಂದ ಇಲ್ಲಿಯ ಪ್ರತಾಪನಗರದ ರಾಜ್ಯ ಸರ್ಕಾರಿ ನೌಕರರ ಸಂಘದ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿ ಸಾಧಕರಿಗೆ ಪ್ರತಿಭಾ ಪುರಸ್ಕಾರ, ಮುಖ್ಯಶಿಕ್ಷಕರು, ಪೋಷಕರಿಗೆ ಸನ್ಮಾನ ಹಾಗೂ ಶೈಕ್ಷಣಿಕ ಮಾರ್ಗದರ್ಶನ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಏಳನೇ ವೇತನ ಆಯೋಗದ ಶಿಫಾರಸು ಜಾರಿ, ಅನುದಾನಿತ ಶಿಕ್ಷಕರಿಗೆ ಶಿಶುಪಾಲನೆ ರಜೆ, ಆರೋಗ್ಯ ಸಂಜೀವಿನಿ ಯೋಜನೆ ಸೇರಿ ಶಿಕ್ಷಕರ ಅನೇಕ ಬೇಡಿಕೆಗಳನ್ನು ಈಡೇರಿಸುವಲ್ಲಿ ಸಂಘ ಪ್ರಮುಖ ಪಾತ್ರ ವಹಿಸಿದೆ ಎಂದು ತಿಳಿಸಿದರು.
ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಮು ಗುಗವಾಡ ಮಾತನಾಡಿ, ಶಿಕ್ಷಕರ ವರ್ಗಾವಣೆ, ಮುಂಬಡ್ತಿ, ಮುಖ್ಯಶಿಕ್ಷಕರ ಪ್ರಭಾರ ಭತ್ಯೆ, ಉಪನ್ಯಾಸಕ ಹುದ್ದೆಗೆ ಬಡ್ತಿ ಮೊದಲಾದ ಬೇಡಿಕೆಗಳ ಬಗ್ಗೆ ಸಂಘ ಆಡಳಿತದ ಗಮನ ಸೆಳೆಯಲಿದೆ ಎಂದು ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿದ ಡಯಟ್ ಪ್ರಾಚಾರ್ಯ ಡಾ. ಮಹಮ್ಮದ್ ಗುಲ್ಶಿನ್ ಮಾತನಾಡಿ, ಶಿಕ್ಷಕರು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸಬೇಕು ಎಂದು ತಿಳಿಸಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಮಾತನಾಡಿ, ಸುಂದರ ಸಮಾಜದ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಬಹಳ ಮಹತ್ವದ್ದಾಗಿದೆ ಎಂದರು.
ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶೇಖ ಮಹೆಬೂಬ್ ಪಟೇಲ್ ಅಧ್ಯಕ್ಷತೆ ವಹಿಸಿದ್ದರು. ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪ್ರಶಾಂತ ರಾಗಾ, ಭೀಮಣ್ಣ ಹಡಪದ, ವಿಜಯಕುಮಾರ ಉಪಸ್ಥಿತರಿದ್ದರು.
ಜಿಲ್ಲಾ ಘಟಕದ ಸಹ ಕಾರ್ಯದರ್ಶಿ ಆಶೀಶ್ ಸೊಲ್ಲಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಲ್ಲಪ್ಪ ಜನತಾನಗರ, ಶ್ರೀದೇವಿ ನಿರೂಪಿಸಿದರು. ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಜೀತೇಂದ್ರ ವಂದಿಸಿದರು.

Ghantepatrike kannada daily news Paper

Leave a Reply

error: Content is protected !!