ಮಹಿಳೆಯರ ಬೆತ್ತಲೆ ಮೆರವಣಿಗೆ: ತೀವ್ರ ಖಂಡನೆ
ಬೀದರ್: ಮಣಿಪುರದ ಕಾಂಗಪೊಕ್ಪಿ ಜಿಲ್ಲೆಯಲ್ಲಿ ನಡೆದ ಬುಡಕಟ್ಟು ಮಹಿಳೆಯರಿಬ್ಬರ ಬೆತ್ತಲೆ ಮೆರವಣಿಗೆ ಹಾಗೂ ಸಾಮೂಹಿಕ ಅತ್ಯಾಚಾರ ಘಟನೆಯನ್ನು ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಿನೋದಕುಮಾರ ಅಪ್ಪೆ ತೀವ್ರವಾಗಿ ಖಂಡಿಸಿದ್ದಾರೆ.
ಮೇ 4 ರಂದು ಮಣಿಪುರದಲ್ಲಿ ನಡೆದಿದ್ದ ಹಿಂಸಾಚಾರದ ವೇಳೆ ಪುರುಷರ ಗುಂಪೊಂದು ರಸ್ತೆಯಲ್ಲಿ ಕುಕಿ-ಜೋ ಬುಡಕಟ್ಟು ಜನಾಂಗಕ್ಕೆ ಸೇರಿದ ಇಬ್ಬರು ಮಹಿಳೆಯರ ಮೆರವಣಿಗೆ ಮಾಡಿ, ನಂತರ ಸಾಮೂಹಿಕ ಅತ್ಯಾಚಾರವೆಸಗಿರುವುದು ಅಮಾನವೀಯ. ಇದು, ಮನುಕುಲವೇ ತಲೆ ತಗ್ಗಿಸುವಂತಹ ಘಟನೆ ಎಂದು ಹೇಳಿದ್ದಾರೆ.
ಘಟನೆ ಬಗ್ಗೆ ಕೇಂದ್ರ ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸಿದೆ. ದೇಶದಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾದ ನಂತರವಷ್ಟೇ ಪ್ರಧಾನಿ ಪ್ರತಿಕ್ರಿಯಿಸಿದ್ದಾರೆ ಎಂದು ಟೀಕಿಸಿದ್ದಾರೆ.
ಮಣಿಪುರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಹೀಗಾಗಿ ಕೂಡಲೇ ಅಲ್ಲಿನ ಸರ್ಕಾರವನ್ನು ವಜಾಗೊಳಿಸಿ, ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕು. ಮಹಿಳೆಯರ ಬೆತ್ತಲೆ ಹಾಗೂ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡಬೇಕು. ಪ್ರಕರಣದ ಎಲ್ಲ ಆರೋಪಿಗಳನ್ನು ಬಂಧಿಸಿ, ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.