ಸೋಮವಾರ ಶಾಲೆಗೆ ರಜೆ ಕೊಡಿ
ಬೀದರ್: ಜಿಲ್ಲೆಯ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಶ್ರಾವಣದ ಮಧ್ಯ ಸೋಮವಾರ ಪೂರ್ಣ ಹಾಗೂ ಉಳಿದ ಸೋಮವಾರ ಅರ್ಧ ರಜೆ ಕೊಡಬೇಕು ಎಂದು ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘ ಹಾಗೂ ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಪದಾಧಿಕಾರಿಗಳು ಬೇಡಿಕೆ ಮಂಡಿಸಿದ್ದಾರೆ.
ನಗರದಲ್ಲಿ ನಿಯೋಗದಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.
ಶ್ರಾವಣದಲ್ಲಿ ಜಿಲ್ಲೆಯ ಜನ ಉಪವಾಸ ವ್ರತ ಸೇರಿದಂತೆ ವಿವಿಧ ಧಾರ್ಮಿಕ ಆಚರಣೆಗಳಲ್ಲಿ ತೊಡಗಿಸಿಕೊಳ್ಳುತ್ತಾರೆ. ಪಾಪನಾಶ ದೇಗುಲಕ್ಕೆ ಭೇಟಿ ನೀಡಿ, ದರ್ಶನ ಪಡೆಯುತ್ತಾರೆ ಎಂದು ತಿಳಿಸಿದರು.
ರಜೆ ಆದೇಶ ಹೊರಡಿಸಿ, ಶಿಕ್ಷಕರು, ವಿದ್ಯಾರ್ಥಿಗಳಿಗೆ ಶ್ರಾವಣ ಆಚರಣೆಗೆ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದರು.
ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಾಂಡುರಂಗ ಬೆಲ್ದಾರ್ ಹಾಗೂ ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಕಪಲಾಪುರೆ ನಿಯೋಗದ ಮುಂದಾಳತ್ವ ವಹಿಸಿದ್ದರು.