ಹವಾ ಮಲ್ಲಿನಾಥ ಮಹಾರಾಜರ ಜನ್ಮದಿನ ನಾಳೆ
ಬೀದರ್: ಇಲ್ಲಿಯ ಐ.ಎಂ.ಎ. ಹಾಲ್ ಹಿಂದುಗಡೆಯ ಓಂ ನಮಃ ಶಿವಾಯ ಸ್ವಾಮೀಜಿ ಆಶ್ರಮದಲ್ಲಿ ಆಗಸ್ಟ್ 26 ರಂದು ಬೆಳಿಗ್ಗೆ 11.30ಕ್ಕೆ ಜೈ ಭಾರತ ಮಾತಾ ರಾಷ್ಟ್ರೀಯ ಸೇವಾ ಸಮಿತಿಯ ರಾಷ್ಟ್ರೀಯ ಸಂಸ್ಥಾಪಕ ಅಧ್ಯಕ್ಷ ಹವಾ ಮಲ್ಲಿನಾಥ ಮಹಾರಾಜರ 56ನೇ ಜನ್ಮದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಳಚಾಪುರದ ಸದ್ರೂಪಾನಂದ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು. ಬೀದರ್ ದಕ್ಷಿಣ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಚಂದ್ರಶೇಖರ ಪಾಟೀಲ ಜಂಟಿಯಾಗಿ ಕಾರ್ಯಕ್ರಮ ಉದ್ಘಾಟಿಸುವರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹೇಶ್ ಮೇಘಣ್ಣನವರ್, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಾಬುವಾಲಿ, ಉದ್ಯಮಿ ಗುರುನಾಥ ಕೊಳ್ಳೂರ, ಹಿರಿಯ ಪತ್ರಕರ್ತ ಸದಾನಂದ ಜೋಶಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಸಂಚಾರ ನಿಯಮಗಳ ಜಾಗೃತಿ ಭಾಗವಾಗಿ ಬೈಕ್ ಸವಾರರಿಗೆ ಉಚಿತ ಹೆಲ್ಮೇಟ್ ವಿತರಿಸಲಾಗುವುದು. ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಗುವುದು. ಕಾರ್ಯಕ್ರಮದಲ್ಲಿ ಅನ್ನ ಸಂತರ್ಪಣೆಯೂ ನಡೆಯಲಿದೆ ಎಂದು ಕಾರ್ಯಕ್ರಮದ ಸಂಘಟಕ, ಜೈ ಭಾರತ ಮಾತಾ ರಾಷ್ಟ್ರೀಯ ಸೇವಾ ಸಮಿತಿಯ ಭಾಲ್ಕಿ ತಾಲ್ಲೂಕು ಘಟಕದ ಅಧ್ಯಕ್ಷ ಪಪ್ಪು ಪಾಟೀಲ ಖಾನಾಪುರ ತಿಳಿಸಿದ್ದಾರೆ.
ಜಾತಿ, ಮತ, ಪಂಥ, ಪಕ್ಷ ಭೇದವಿಲ್ಲದೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.